Matte Congress adhikarakke: Karyakartarige Siddu kare

ಬೆಂಗಳೂರು, ಸೆ. ೨೩ – ಬಿಜೆಪಿ ನಾಯಕರು ಮಾಡುತ್ತಿರುವ ಸುಳ್ಳಿನ ಅಪಪ್ರಚಾರಕ್ಕೆ ತಿರುಗೇಟು ನೀಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರು ಈಗಿನಿಂದಲೇ ಸಂಘಟಿತವಾಗಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಅವರು ಗ್ಲೋಬಲ್ ಥಿಯರಿಯಲ್ಲಿ ನಂಬಿಕೆ ಇಟ್ಟಿದ್ದಾರೆ. ಅವರ ಸುಳ್ಳಿನ ಬಗ್ಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ಪಕ್ಷ ಸತ್ಯ ಹೇಳುವ ಕಾರ್ಯಕ್ರಮ ಆಯೋಜಿಸಿದೆ ಎಂದು ಹೇಳಿದರು.

ಮಹದೇವಪುರ ವಿಧಾನಸಭಾ ಕ್ಷೇತ್ರದ ರಾಮಗೊಂಡನಹಳ್ಳಿಯಲ್ಲಿ ಆಯೋಜಿಸಿದ್ದ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ 4.5 ವರ್ಷದ ಸಾಧನೆ ಬಿಂಬಿಸುವ ಕಿರುಹೊತ್ತಿಗೆಗಳನ್ನು ಜನರಿಗೆ ನೀಡಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರ ಆಶೀರ್ವಾದ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.

ಕಳೆದ ಬಾರಿ ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ, ‘ಕಾಂಗ್ರೆಸ್ ನಡಿಗೆ ಜನರ ಬಳಿಗೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು ಆಗ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 155ಕ್ಕೂ ಹೆಚ್ಚು ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ, ಸರ್ಕಾರ ಮಾಡಿರುವ ಸಾಧನೆಗಳನ್ನು ಕಿರುಹೊತ್ತಿಗೆ ಮೂಲಕ ಜನರಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ತಲುಪಿಸುವ ಕೆಲಸ ಮಾಡುತ್ತಿದೆ ಎಂದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಜನರು ಆಶೀರ್ವಾದ ಮಾಡಿ ಎಂದು ಮನವಿ ಮಾಡಿದ ಅವರು, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಮತದಾರರ ಬಳಿ ಸರ್ಕಾರದ ಸೌಲಭ್ಯಗಳ ಬಗ್ಗೆ ವಿಚಾರಿಸದೆ ಅವರಿಗೆಲ್ಲ ಅನ್ನಭಾಗ್ಯ ಸೇರಿದಂತೆ ಸರ್ಕಾರದ ಸೌಲಭ್ಯಗಳು ತಲುಪುತ್ತಿವೆ. ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

ದೇಶದಲ್ಲಿ ನೋಟು ಅಮಾನ್ಯದ ಬಳಿಕ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಇದರಿಂದ ಬಡವರು ಬೀದಿಗೆ ಬರುವಂತಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಡಜನರ ವಿರೋಧಿಯಾಗಿದೆ. ಪ್ರಧಾನಿ ನರೇಂದ್ರಮೋದಿ ಅವರದು ‘ಮನ್ ಕಿ ಬಾತ್’ ಆದರೆ ನಮ್ಮದು ‘ಕಾಮ್ ಕೀ ಬಾತ್’ ಎಂದು ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ಒಳಗೊಂಡ ಸರ್ಕಾರ. ಪ್ರಧಾನಿ ನರೇಂದ್ರಮೋದಿ ಮತ್ತು ಅವರ ಪಕ್ಷ ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್’ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಆದರೆ, ನಾವು ಅದನ್ನು ಕಾರ್ಯಾಗತ ಮಾಡುತ್ತಿದ್ದೇವೆ ಎಂದರು.

ನೋಟು ಅಮಾನ್ಯದ ಬಳಿಕ ದೇಶದಲ್ಲಿ 125 ಜನರು ಸಾವಿಗೀಡಾಗಿದ್ದರು. ಅದರಲ್ಲಿ ಬಡವರು, ಕೂಲಿ ಕಾರ್ಮಿಕರು, ರೈತರೇ ಹೊರತು ಶ್ರೀಮಂತರಲ್ಲ. ನರೇಂದ್ರಮೋದಿ ಪ್ರಧಾನಿಯಾದ ಮೇಲೆ ವಿಮಾನದಲ್ಲಿ ಓಡಾಡುವುದನ್ನು ಬಿಟ್ಟರೆ ಅವರಿಂದ ದೇಶದಲ್ಲಿ ಯಾವುದೇ ಸಾಧನೆಯಾಗಿಲ್ಲ ಎಂದರು.

ರಾಜ್ಯ ಬಿಜೆಪಿ ನಾಯಕರು ‘ಮೀಟರ್ ಇಲ್ಲದ ಗಿರಾಕಿ’ಗಳು ಅವರಿಗೆ ರಾಜ್ಯದ ಹಿತ ಬೇಕಾಗಿಲ್ಲ, ರೈತರ ಸಾಲ ಮನ್ನಾ, ನೀರಾವರಿ ಸಮಸ್ಯೆ ಬಗೆಹರಿಯುವುದು ಬೇಕಿಲ್ಲ, ಕೇಂದ್ರ ಸರ್ಕಾರದ ಬಳಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಿಸುವ ಬದಲು ವಿನಾಕಾರಣ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಸಮಾವೇಶದಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್, ಕೆ.ಜೆ. ಜಾರ್ಜ್, ಸಂಸದರಾದ ಕೆ.ಎಚ್. ಮುನಿಯಪ್ಪ, ವೀರಪ್ಪ ಮೊಯ್ಲಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಮತದಾರರ ಮನ ಗೆಲ್ಲುವತ್ತ ಶ್ರೀನಿವಾಸ್

ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎ.ಸಿ. ಶ್ರೀನಿವಾಸ್ ಕ್ಷೇತ್ರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಮೂಲಕ ಈ ಬಾರಿ ಮತದಾರರ ಮನ ಗೆಲ್ಲಲು ಮುಂದಾಗಿದ್ದಾರೆ.

ಮನೆ ಮನೆಗೆ ಕಾಂಗ್ರೆಸ್ ಅಭಿಯಾನವನ್ನು ಕ್ಷೇತ್ರದಲ್ಲಿ ಆಯೋಜಿಸುವ ಮೂಲಕ ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಘಟಾನುಘಟಿ ನಾಯಕರುಗಳನ್ನು ಕರೆಸಿಕೊಳ್ಳುವ ಮೂಲಕ ಈ ಬಾರಿ ವಿಜಯದ ಮಾಲೆ ಧರಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಸಮಾವೇಶವನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ.

Sanjevani News Gulbarga

 

Comments
Facebooktwittergoogle_plusredditpinterestlinkedinmail

Leave a Reply

Facebook